ಹುಬ್ಬಳ್ಳಿ : ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ಹಾಗಾಗಿ ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಲೆ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯುಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಹಾಗಾಗಿ ನಮ್ಮ ಪಕ್ಷ ಕಳೆದ ಬಾರಿಗಿಂತಲೂ ಹೆಚ್ಚು ಪ್ರಗತಿ ಸಾಧಿಸಿದೆ ಎಂದರು.
ಬಿಜೆಪಿ ಶಾಸಕರಿದ್ದ ಕಡೆಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಶಾಸಕರಿದ್ದ ಕಡೆಗೆ ಅವರು ಹೆಚ್ಚಿನ ಸ್ಥಾನ ಗೆದ್ದಿದ್ದಾರಾ? ಎಂದು ಮರುಪ್ರಶ್ನೆ ಮಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಈ ರೀತಿಯ ಫಲಿತಾಂಶ ಸಹಜ. ಈ ಕುರಿತು ಪರಾಮರ್ಶೆ ಮಾಡುತ್ತೇವೆ ಎಂದರು.
ಅರವಿಂದ ಬೆಲ್ಲದ ರಾಜೀನಾಮೆ ವಿಷಯ ಗೊತ್ತಿಲ್ಲ: ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಾಸಕ ಅರವಿಂದ ಬೆಲ್ಲದ ರಾಜೀನಾಮೆ ಕೊಟ್ಟಿರುವ ವಿಷಯ ನನಗೆ ಗೊತ್ತಿಲ್ಲ. ನನ್ನ ಅಸಮಾಧಾನದ ಕಾರಣಕ್ಕೆ ಅವರು ರಾಜೀನಾಮೆ ಕೊಟ್ಟಿದ್ದಾರೆಂಬುದು ಸುಳ್ಳು ಎಂದ ಅವರು ಶಾಸಕ ಎಂ.ಪಿ.ರೇಣುಕಾಚಾರ್ಯ ಸಂಪುಟದಲ್ಲಿ ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದು ಅವರ ವೈಯುಕ್ತಿಕ ವಿಚಾರಗಳನ್ನು ಹೇಳುತ್ತಿದ್ದಾರೆ. ಯಾರೇ ಮುಕ್ತವಾಗಿ ಅವರ ಅಭಿಪ್ರಾಯ ಹೇಳಲು ಅವಕಾಶವಿದೆ. ಈ ರೀತಿ ಹೇಳಿಕೆ ನಿಡೋದು ಪಕ್ಷ ವಿರೋಧಿ ಚಟುವಟಿಕೆ ಎನ್ನಲಾಗಲ್ಲ. ನನ್ನ ವೈಯಕ್ತಿಕ ಅಭಿಪ್ರಾಯವನ್ನು ಪಕ್ಷದ ಆಂತರಿಕ ಸಭೆಯಲ್ಲಿ ವ್ಯಕ್ತಪಡಿಸಿದ್ದೇನೆ ಎಂದರು.
ಕೋರ ಕಮಿಟಿ ಸಭೆ ರದ್ದು ವಿಚಾರ ; ಬಿ.ಎಸ್.ಯಡಿಯೂರಪ್ಪ ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅರುಣಸಿಂಗ್ ಕೂಡಾ ಬೇಗನೆ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ಕಾರಣದಿಂದ ಕೋರ್ ಕಮಿಟಿ ಸಭೆ ನಡೆಸಲಾಗಲಿಲ್ಲ. ಮುಂದಿನ ದಿನಗಳಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗುವುದು ಎಂದು ಶೆಟ್ಟರ್ ತಿಳಿಸಿದರು.