ಕುಂದಗೋಳ: ರಾಜ್ಯ ಸರ್ಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕುಂದಗೋಳ ತಾಲೂಕು ಬಿಜೆಪಿ ರೈತಮೋರ್ಚಾ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.
ಶಾಸಕ ಎಮ್.ಆರ್.ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶಿಲ್ದಾರ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವ ಆಡುತ್ತಿದೆ. ಈ ವೇಳೆ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ ಸಂಪೂರ್ಣ ಬೇಜವಾಬ್ದಾರಿಯಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಶಾಸಕ ಎಮ್.ಆರ್.ಪಾಟೀಲ್ ಆರೋಪಿಸಿದರು.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತ ಸಂಕಷ್ಟದಲ್ಲಿದ್ದಾನೆ. ಈ ವೇಳೆ ವಿದ್ಯುತ್ ಕಣ್ಣಾಮುಚ್ಚಾಲೆ ಬೇರೆ? ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲು ಪಂಪ್ ಸೆಟ್ ಗಳಿಗೆ ವಿದ್ಯುತ್ಯ ಯಿಲ್ಲದೇ ರೈತ ಕಷ್ಟ ಅನುಭವಿಸುವಂತಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ರೈತರಿಗಾಗಿ ಕಿಸಾನ್ ಸನ್ಮಾನ ನಿಧಿ, ರೈತ ವಿದ್ಯಾನಿಧಿ, ಭೂ ಸಿರಿ, ಶ್ರಮ ಶಕ್ತಿ, ರೈತ ಸಂಪದ ಸೇರಿದಂತೆ ಇನ್ನಿತರ ಯೋಜನೆ ಜಾರಿಗೊಳಿಸಲಾಗಿತ್ತು. ಆದರೆ ಇದೀಗ ಅವುಗಳನ್ನು ರದ್ದು ಮಾಡಿ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ರಾಜ್ಯದಲ್ಲಿ ಸರ್ಕಾರ ರೈತ ವಿರೋಧಿ ನೀತಿಯಿಂದ ರೈತನ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಬೇಕು, ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಘವೇಂದ್ರಗೌಡ ಪಾಟೀಲ್, ಮಂಡಲ ಅಧ್ಯಕ್ಷ ರವಿಗೌಡ ಪಾಟೀಲ್, ತಾಲೂಕ್ ರೈತ ಮೋರ್ಚಾ ಅಧ್ಯಕ್ಷ ಚನ್ನಪ್ಪ ಹರಕುಣಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ನೂರಾರು ಸಂಖ್ಯೆಯಲ್ಲಿ ರೈತ ಬಾಂಧವರು ಉಪಸಿತರಿದ್ದರು.