ಹುಬ್ಬಳ್ಳಿ : ಇತ್ತಿಚೆಗೆ ನಡೆದ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆ ಮತ್ತು 540 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಎಎಪಿ ಜಿಲ್ಲಾ ಉಪಾಧ್ಯಕ್ಷ ಪ್ರವೀಣ ಕುಮಾರ ನಡಕಟ್ಟಿ ಆಗ್ರಹಿಸಿದರು.
ನಗರದಲ್ಲಿ ಇಂದು ಮಾತನಾಡಿದ ಅವರು, ಪೋಲಿಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈಗಾಗಲೇ ಹೋರಾಟ ಸೇರಿದಂತೆ ಜನಪ್ರತಿನಿಧಿಗಳಿಗೆ ದೂರು ನೀಡಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವವರನ್ನು ಸಂಪೂರ್ಣ ಪರೀಕ್ಷೆ ಮಾಡಿ ಪರೀಕ್ಷಾ ಕೊಠಿಡಿಗೆ ಬಿಡಬೇಕು. ವರ್ಷದ ಆರಂಭದಲ್ಲಿಯೇ ಪರೀಕ್ಷೆಗಳ ಅಧಿಸೂಚನೆ ಹೊರಡಿಸಬೇಕು. ಒಬ್ಬ ವಿದ್ಯಾರ್ಥಿ ಒಂದೇ ಅರ್ಜಿ ಸಲ್ಲಿಸಲು ಗುರತಿನ ಚೀಟಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಈ ಎಲ್ಲ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪರವಾಗಿ ಮಾ.23 ರಂದು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದರು.