ಹುಬ್ಬಳ್ಳಿ : ಜೂ 20
ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಕೆ ಮಾಡಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗ ಸೂಚಿ ನಿರ್ದೇಶನಗಳ ಆದೇಶಗಳ ಪ್ರಕಾರ ಎಲ್ಲಾ ಸುರಕ್ಷಿತ ಕ್ರಮಗಳೊಂದಿಗೆ ಸೋಮವಾರ ಬೆಳಿಗ್ಗೆಯಿಂದ ಬಸ್ಸುಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣ , ನವಲಗುಂದ,ಅಣ್ಣಿಗೇರಿ, ಕಲಘಟಗಿ,ಕುಂದಗೋಳ ತಡಸ ಮತ್ತಿತರ ಪ್ರಮುಖ ಬಸ್ ನಿಲ್ದಾಣಗಳಿಂದ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಮತ್ತು ಇತರ ಪ್ರಮುಖ ಸ್ಥಳಗಳಿಗೆ ಬಸ್ಸುಗಳು ಸಂಚರಿಸಲಿವೆ. ನೆರೆಯ ಜಿಲ್ಲೆಗಳಾದ ಗದಗ, ಇಲಕಲ್, ಬಾಗಲಕೋಟೆ, ವಿಜಯಪುರ, ಹಾವೇರಿ, ದಾವಣಗೆರೆ,ಶಿರಸಿ, ಬೆಳಗಾವಿ ಮತ್ತಿತರ ಸ್ಥಳಗಳಿಗೆ ಬಸ್ ಸಂಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ದೂರದ ಊರುಗಳಿಗೆ ವಿಸ್ತರಿಸಲು ಕ್ರಮ ವಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ
ಬಸ್ಸುಗಳು,ಡಿಪೋಗಳು ಮತ್ತು ಬಸ್ ನಿಲ್ದಾಣಗಳನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ. ಲಸಿಕೆ ಪಡೆದುಕೊಂಡಿರುವ ಸಿಬ್ಬಂದಿಗಳನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ.ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ವೈಯಕ್ತಿಕ ಬಳಕೆಗೆ ಸ್ಯಾನಿಟೈಸರ್ ನೀಡಲಾಗಿದೆ.
ಬಸ್ಸುಗಳ ಒಟ್ಟು ಆಸನಗಳ ಸಾಮರ್ಥ್ಯದ ಶೇಕಡ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.ನಿಂತು ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.ಬೆಳಿಗ್ಗೆಯಿಂದ ಸಂಜೆ 7 ಗಂಟೆಯವರೆಗೆ ಬಸ್ಸುಗಳು ಸಂಚರಿಸಲಿವೆ. ಬಸ್ಸು ಮತ್ತು ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ಮೂಲಕ ಕೋವಿಡ್ ಮಾರ್ಗಸೂಚಿ ನಿರ್ದೇಶನಗಳ ಸಮರ್ಪಕ ಅನುಷ್ಠಾನಕ್ಕೆ ಸಾರ್ವಜನಿಕರು ಸಂಸ್ಥೆಯೊಂದಿಗೆ ಸಹಕರಿಸಲು ಅವರು ಮನವಿ ಮಾಡಿದ್ದಾರೆ.