ರೈಲು ಹಳಿ ಮೇಲೆ ಗುಡ್ಡ ಕುಸಿದು ಗೋವಾಕ್ಕೆ ರೈಲು ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯಿಂದ
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಯೊಂದಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಇತ್ತೀಚಿನ ಮಹಾಮಳೆ ಅವಾಂತರಗಳನ್ನೇ ಸೃಷ್ಟಿಸಿದೆ. ದೂದ ಸಾಗರ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದು ರೈಲು ಸಂಚಾರಕ್ಕೆ ವ್ಯತ್ಯಯವಾಗಿದೆ. ಇದರಿಂದ ವಾಸ್ಕೊ ದಿಂದ ಮಡಗಾಂವ,ದೂದಸಾಗರ,ಕ್ಯಾಸಲ್ ರಾಕ್,ಲೋಂಡಾ,ಧಾರವಾಡ ಮಾರ್ಗವಾಗಿ ಹುಬ್ಬಳ್ಳಿಗೆ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ರೈಲು ಸಂಚಾರ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಗೋವಾಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಬೆಳಿಗ್ಗೆಯಿಂದಲೇ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಈ ಬಸ್ ಗಳು ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಘಾಟ್ ಮಾರ್ಗವಾಗಿ ಸಂಚರಿಸುತ್ತವೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಗೋವಾ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರು 72 ಗಂಟೆಗಳ ಮುಂಚಿತ ವಾಗಿ ಪಡೆದಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ. ಪರೀಕ್ಷೆ ಮಾಡಿಸಿಕೊಳ್ಳದೆ ತೆರಳುವವರು ಗೋವಾ ರಾಜ್ಯದ ಗಡಿಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅದಕ್ಕೆ ರೂ.270 ಶುಲ್ಕ ಪಾವತಿಸಬೇಕು. ಅಂತಹವರ ಅನುಕೂಲಕ್ಕಾಗಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಉಚಿತ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಗೋವಾಕ್ಕೆ ಹೋಗುವ ಪ್ರಯಾಣಿಕರು ಗೋಕುಲ ರಸ್ತೆ ಬಸ್ ನಿಲ್ದಾಣಕ್ಕೆ ಬರಬೇಕು. ಅಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯಿಂದ ರಾಪಿಡ್ ಆ್ಯಂಟಿಜನ್ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಅದರಲ್ಲಿ ನೆಗೆಟಿವ್ ವರದಿ ಬಂದವರಿಗೆ ಮಾತ್ರ ಮುಂದಿನ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಸಂಜೆಯವರೆಗೆ ಪಣಜಿಗೆ 15 ವಿಶೇಷ ಬಸ್ ಗಳನ್ನು ಕಾರ್ಯಾಚರಣೆ ಮಾಡಲಾಯಿತು. ಅಂದಾಜು 700ಕ್ಕೂ ಹೆಚ್ಚು ಪ್ರಯಾಣಿಕರು ತೆರಳಿದ್ದಾರೆ. ಪ್ರಯಾಣಿಕರ ಬೇಡಿಕೆ ಗಮನಿಸಿ ಮುಂದಿನ ದಿನಗಳಲ್ಲಿ ವಾಸ್ಕೋ ಮತ್ತು ಮಡಗಾಂವಗೆ ಬಸ್ ಗಳನ್ನು ಓಡಿಸಲಾಗುತ್ತದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.
Hubli News Latest Kannada News